Spread the love

ದಾಂಡೇಲಿ: ತಾಲೂಕಿನ ಕರ್ಕಾ ಕ್ರಾಸ್ ಹಾಗೂ ಅಜಗಾಂವ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೃಹತ್ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಇವರಲ್ಲಿ ಇಬ್ಬರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ತಕ್ಷಣವೇ ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಜ್ಜುಗುಜ್ಜಾಗಿರುವ ವಾಹನದ ಸ್ಥಿತಿಯನ್ನು ನೋಡಿದರೆ ಅಪಘಾತದ ತೀವ್ರತೆ ಎಷ್ಟಿತ್ತು ಎಂಬುದು ಸ್ಪಷ್ಟವಾಗುತ್ತದೆ.

ಮೃತ ದುರ್ದೈವಿಗಳನ್ನು ಧಾರವಾಡ ಮೂಲದ ಫಾರೂಖ್ ಸಾಬ್ ಹಾಗೂ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹಳಿಯಾಳ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *