ಕಾರವಾರ: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಜುಲೈ 6ರ ಬೆಳಗ್ಗೆ 8:30ರಿಂದ ಜುಲೈ 7ರ ಬೆಳಗ್ಗೆ 8:30ರವರೆಗಿನ ಮುನ್ಸೂಚನೆ ಪ್ರಕಟಿಸಿರುವ ಇಲಾಖೆ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಿಶೇಷ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು-ಮಿಂಚು ಸಹಿತ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹೀಗಾಗಿ ಸಮುದ್ರಕ್ಕೆ ಮೀನುಗಾರರು ತೆರಳದಂತೆ ಹಾಗೂ ಕರಾವಳಿ ಭಾಗದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ದಾವಣಗೆರೆ, ಬೆಳಗಾವಿ, ಧಾರವಾಡ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು-ಮಿಂಚಿನ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ಕೊಪ್ಪಳ, ಗದಗ, ರಾಯಚೂರು, ಯಾದಗಿರಿ, ಬೀದರ್, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಕಡೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಿಶೇಷವಾಗಿ ಬೀದರ್ ಹಾಗೂ ಕಲಬುರಗಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಭಾರೀ ಮಳೆ, ಬಿರುಗಾಳಿ ಹಾಗೂ ಗುಡುಗು-ಮಿಂಚಿನ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರ ಸಂಚರಿಸದಂತೆ, ಮರಗಳು ಹಾಗೂ ವಿದ್ಯುತ್ ಕಂಬಗಳ ಕೆಳಗೆ ಆಶ್ರಯ ಪಡೆಯದಂತೆ ಹವಾಮಾನ ಇಲಾಖೆ ಮನವಿ ಮಾಡಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
