ಕಾರವಾರ: ಕಾರವಾರದಲ್ಲಿ ಯುವಕನೋರ್ವನ ನಿರ್ಲಕ್ಷ್ಯದ ಚಾಲನೆಯಿಂದಾಗಿ, ಬೈಕ್ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ಗುದ್ದಿದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಾರವಾರದ ಡಿ.ಹೆಚ್.ಓ (DHO) ಕಚೇರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಯುವಕನು ತನ್ನ ವಾಹನವನ್ನು ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು, ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯ ಬೈಕಿಗೆ ರಭಸವಾಗಿ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಮಹಿಳೆ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು. ಇದೇ ವೇಳೆ ಸ್ಥಳದಲ್ಲಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಕಲ್ಗುಟ್ಕರ್ ಅವರು ತಕ್ಷಣವೇ ಸ್ಪಂದಿಸಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಎತ್ತಿ ಆರೈಕೆ ಮಾಡಿದ್ದಾರೆ. ಕೂಡಲೇ ಅಂಬ್ಯುಲೆನ್ಸ್ಗೆ ಕರೆ ಮಾಡಿ ಆಕೆಯನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಸಕಾಲಿಕ ಮಾನವೀಯತೆ ಮೆರೆದಿದ್ದಾರೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಕಾರವಾರ ನಗರ ಠಾಣೆಯ ಸಿಪಿಐ (CPI) ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಯುವಕನ ವಿರುದ್ಧ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
