Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಲಕ್ಷ್ಮಣ ಸವದಿ ಅವರು ಗುರುವಾರ ಕಾರವಾರಕ್ಕೆ ಆಗಮಿಸಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಿರ್ಮಾಣವಾಗುತ್ತಿರುವ ಕಾಳಿ ಸೇತುವೆ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಕಾಮಗಾರಿಯ ಪ್ರಗತಿ ಸೇರಿದಂತೆ ವಿವಿಧ ಮಾಹಿತಿಗಳನ್ನು ಸಚಿವರಿಗೆ ನೀಡಿದರು.

ಪರಿಶೀಲನೆ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಸಸಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ನೂತನ ಸಚಿವ ಸಂಪುಟ ರಚನೆಯಾದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಸಚಿವರಿಗೆ ಜಿಲ್ಲೆಗಳ ಪ್ರವಾಸ ಕೈಗೊಂಡು ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಕೆಲವು ಭಾಗಗಳಲ್ಲಿ ಅತಿವೃಷ್ಟಿ ಮತ್ತು ಇನ್ನೂ ಕೆಲವು ಭಾಗಗಳಲ್ಲಿ ಅನಾವೃಷ್ಟಿ ಎದುರಾಗಿರುವ ಹಿನ್ನೆಲೆಯಲ್ಲಿ ಎಲ್ಲಾ 31 ಜಿಲ್ಲೆಗಳಲ್ಲೂ ಸಚಿವರ ಪ್ರವಾಸ ನಡೆಯುತ್ತಿದೆ. ಉಸ್ತುವಾರಿ ಸಚಿವರಿಲ್ಲದ ಜಿಲ್ಲೆಗಳಿಗೂ ಇತರ ಸಚಿವರನ್ನು ನಿಯೋಜಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಜವಾಬ್ದಾರಿ ತಮಗೆ ನೀಡಲಾಗಿದೆ ಎಂದು ಹೇಳಿದರು. ಇಂದು ಹಾಗೂ ನಾಳೆ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ದೊರೆಯದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ರೀತಿಯ ಅಸಮಾಧಾನ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಸರ್ಕಾರ ಮತ್ತು ಪಕ್ಷದ ಪರವಾಗಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.

ಭಟ್ಕಳ ಶಾಸಕ ಮಂಕಾಳು ವೈದ್ಯ ಅವರ ಹೆಸರು ಅಂತಿಮ ಸಚಿವರ ಪಟ್ಟಿಯಿಂದ ಕೈಬಿಟ್ಟಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ರಾಜಕೀಯದಲ್ಲಿ ಅವಕಾಶಗಳು ಬರುತ್ತವೆ ಮತ್ತು ಹೋಗುತ್ತವೆ. ಇಂತಹ ಬೆಳವಣಿಗೆಗಳನ್ನು ಸಮಾನ ಮನೋಭಾವದಿಂದ ಸ್ವೀಕರಿಸಿ ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟರು.

ಸಚಿವ ಸ್ಥಾನಕ್ಕಾಗಿ ಕೋಟ್ಯಂತರ ರೂಪಾಯಿ ಹಣದ ಬೇಡಿಕೆ ಇಡಲಾಗಿದೆ ಎನ್ನಲಾದ ವೈರಲ್ ಆಡಿಯೋ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಷಯವನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅದರ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಯಬೇಕು. ಆಡಿಯೋದಲ್ಲಿ ಮಾತನಾಡಿರುವವರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.

ಸಚಿವ ನಾಗೇಂದ್ರ ವಿರುದ್ಧ ಬಿಜೆಪಿ ಹೋರಾಟ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮಣ ಸವದಿ, ಬಿಜೆಪಿಯಲ್ಲಿ 25 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅನುಭವವಿದ್ದು, ಅವರು ಯಾವಾಗ ಹೋರಾಟ ಆರಂಭಿಸುತ್ತಾರೋ ಆಗ ಸರ್ಕಾರದಿಂದ ಸೂಕ್ತ ಉತ್ತರ ನೀಡಲಾಗುವುದು ಎಂದರು.

ಸಭಾಪತಿಗಳ ರಾಜೀನಾಮೆ ಹಾಗೂ ಹೈಕಮಾಂಡ್ ನಿರ್ದೇಶನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಂವಿಧಾನಾತ್ಮಕ ಪ್ರಕ್ರಿಯೆಯಡಿ ಸ್ಥಾನ ತೆರವಾದ ಬಳಿಕ ಹೊಸ ಅಭ್ಯರ್ಥಿಯನ್ನು ನೇಮಕ ಮಾಡುವ ಕುರಿತು ಪಕ್ಷದ ವರಿಷ್ಠರು ಪತ್ರ ಬರೆಯುವುದರಲ್ಲಿ ಯಾವುದೇ ತಪ್ಪಿಲ್ಲ. ಈ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ಆಡಳಿತಾವಧಿಯಲ್ಲಿಯೂ ಇಂತಹ ರಾಜಕೀಯ ನಿರ್ಧಾರಗಳು ನಡೆದಿವೆ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *