ಕಾರವಾರ: ಗಡಿ ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಸದುದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮುಂಬರುವ ಡಿಸೆಂಬರ್ 15 ರಿಂದ 31ರವರೆಗೆ ಅದ್ಧೂರಿ ‘ಗಡಿನಾಡ ಕರಾವಳಿ ಉತ್ಸವ’ವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಅಕ್ಷಯ್ ನಾಗೇಕರ್ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉತ್ಸವದ ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು. ನಗರದ ಮಯೂರವರ್ಮ ವೇದಿಕೆಯಲ್ಲಿ ಸತತ 15 ದಿನಗಳ ಕಾಲ ಈ ಬೃಹತ್ ಉತ್ಸವ ನಡೆಯಲಿದೆ. ಆರಂಭಿಕ ಒಂದು ವಾರ ಕಾಲ ವಿವಿಧ ವೇದಿಕೆ ಕಾರ್ಯಕ್ರಮಗಳು ಜರುಗಲಿದ್ದು, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ರ್ಯಾಪ್ ಗಾಯಕ ಅಲೋಕ್, ಐಶ್ವರ್ಯ ರಂಗರಾಜನ್ ಹಾಗೂ ‘ಮೀನ ಕಣ್ಣೊಳೆ’ ಖ್ಯಾತಿಯ ಗಾಯಕ ಜಸ್ಕಿರಣ್ ಸಿಂಗ್ ಸೇರಿದಂತೆ ಹಲವು ಪ್ರಸಿದ್ಧ ಕಲಾವಿದರು ಸಂಗೀತ ಸುಧೆ ಹರಿಸಲಿದ್ದಾರೆ. ಇದೇ ವೇಳೆ ಕನ್ನಡದ ಹಾಡುಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಕಲಾವಿದರಲ್ಲಿ ವಿಶೇಷವಾಗಿ ಮನವಿ ಮಾಡಲಾಗಿದೆ.
ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಮನರಂಜನೆ
ಈ ಕರಾವಳಿ ಉತ್ಸವವನ್ನು ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ಆಯೋಜಿಸಲಾಗುತ್ತಿದ್ದು, ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಸ್ಥಳೀಯ ಜಾನಪದ ಕಲಾ ತಂಡಗಳಿಗೂ ತಮ್ಮ ಪ್ರತಿಭೆ ಪ್ರದರ್ಶಿಸಲು ಮುಕ್ತ ಅವಕಾಶ ಕಲ್ಪಿಸಲಾಗುವುದು. ಇದರ ಜೊತೆಗೆ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆ, ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಬಗೆಬಗೆಯ ಆಹಾರ ಮಳಿಗೆಗಳಿಗೂ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಅಧಿಕೃತ ಅನುಮತಿಯನ್ನೂ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಉದ್ಘಾಟನಾ ಸಮಾರಂಭಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಆಹ್ವಾನಿಸುವ ಚಿಂತನೆ ಇದ್ದು, ಕರವೇ ರಾಜ್ಯಾಧ್ಯಕ್ಷರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಕೃಷ್ಣ ಬಂಟ, ಸಂತೋಷ ನಾಯ್ಕ, ಚೇತನ ಕೋಚರೇಕರ್, ಹಸನ್, ಅಜೀಂ ಶೇಖ್ ಹಾಗೂ ಬ್ರಿಜೆಶ್ ನಾಯ್ಕ ಉಪಸ್ಥಿತರಿದ್ದರು.
