Spread the love

ಕಾರವಾರ: ತಾಲೂಕಿನ ಕಿನ್ನರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಉಪ್ಪು ನೀರಿನ ಸಮಸ್ಯೆಯನ್ನು ಬಗೆಹರಿಸಿ, ಕುಡಿಯುವ ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. 

ಶನಿವಾರ ಕಿನ್ನರ ಗ್ರಾಮ ಪಂಚಾಯತ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪ್ರಜಾಸೇವೆ ಆಂದೋಲನ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮದ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿರುವ ಹಾಗೂ ಕುಡಿಯುವ ನೀರಿನ ಬಾವಿಗಳಿಗೆ ಉಪ್ಪು ನೀರು ಸೇರ್ಪಡೆಯಾಗುತ್ತಿರುವ ಗಂಭೀರ ಸಮಸ್ಯೆಯ ಕುರಿತು ಗ್ರಾಮಸ್ಥರು ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. 

ಇದಕ್ಕೆ ಸ್ಪಂದಿಸಿದ ಅವರು, ಉಪ್ಪು ನೀರಿನ ಸಮಸ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಈ ಭಾಗದಲ್ಲಿ ಖಾರ್ಲ್ಯಾಂಡ್ ನಿರ್ಮಾಣ ಮಾಡುವ ಕುರಿತು ಸಣ್ಣ ನೀರಾವರಿ ಇಲಾಖೆಯಿಂದ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಆದಷ್ಟು ಶೀಘ್ರದಲ್ಲಿಯೇ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಮಾತನಾಡಿ, ಈ ಭಾಗದ ನೀರಿನ ಸಮಸ್ಯೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಕೈಗೊಳ್ಳಲಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಶಾಶ್ವತ ಪರಿಹಾರ ಒದಗಿಸಲಾಗುವುದು ಹಾಗೂ ಈ ಬೃಹತ್ ಯೋಜನೆಯು ಮಾರ್ಚ್ ಅಂತ್ಯದೊಳಗೆ ಸಂಪೂರ್ಣವಾಗಿ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು. 

ಇದೇ ವೇಳೆ ಕಾಳಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ದೂರುಗಳ ಕುರಿತು ಎಚ್ಚರಿಕೆ ನೀಡಿದ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಈ ಭಾಗದಲ್ಲಿ ತಕ್ಷಣವೇ ಚೆಕ್ ಪೋಸ್ಟ್ ಆರಂಭಿಸಿ ಮರಳು ದಂಧೆಗೆ ಬ್ರೇಕ್ ಹಾಕಲಾಗುವುದು ಎಂದು ಸ್ಪಷ್ಟಪಡಿಸಿದರು.

ಹೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಲೈನ್‌ಗಳ ದುರಸ್ತಿ, ವಿದ್ಯುತ್ ಕಂಬಗಳ ಸ್ಥಳಾಂತರ ಹಾಗೂ ಅರಣ್ಯ ಇಲಾಖೆಯಿಂದ ಅಪಾಯಕಾರಿ ಮರಗಳ ತೆರವು ಕಾರ್ಯಾಚರಣೆಯ ಕುರಿತು ಸಲ್ಲಿಕೆಯಾಗಿರುವ ದೂರುಗಳನ್ನು ತಕ್ಷಣವೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು. 

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ಹಾವಳಿ ನಿಯಂತ್ರಣ ಸೇರಿದಂತೆ ಸಾರ್ವಜನಿಕರಿಂದ ಒಟ್ಟು 40 ಕ್ಕೂ ಅಧಿಕ ದೂರುಗಳು ಸಭೆಯಲ್ಲಿ ಸಲ್ಲಿಕೆಯಾಗಿದ್ದು, ಈ ಎಲ್ಲಾ ಸಮಸ್ಯೆಗಳಿಗೆ ನಿಗದಿತ ಕಾಲಮಿತಿಯೊಳಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಜನತೆಗೆ ಭರವಸೆ ನೀಡಿದರು. 

ಈ ಸಭೆಯಲ್ಲಿ ಕಾರವಾರ ಉಪ ವಿಭಾಗಾಧಿಕಾರಿ ರಮ್ಯಾ, ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಏನಗೌಡರ, ಡಿವೈಎಸ್‌ಪಿ ಗಿರೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *