ಸಿದ್ದಾಪುರ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಹಾಗೂ ಸಾರಿಗೆ ಸಂಚಾರದ ದೃಷ್ಟಿಯಿಂದ ಅತ್ಯಗತ್ಯವಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ್ ಭೂಮಿಪೂಜೆ ನೆರವೇರಿಸಿದರು.
ಬೇಡ್ಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಟಾ-ಕೋಡಮಡಗಿ ರಾಜ್ಯ ಹೆದ್ದಾರಿ-48ರಲ್ಲಿ ₹165 ಲಕ್ಷ ವೆಚ್ಚದಲ್ಲಿ 2 ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಬಿಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇದೇ ಹೆದ್ದಾರಿಯಲ್ಲಿ ₹135 ಲಕ್ಷ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ₹20 ಲಕ್ಷ ವೆಚ್ಚದಲ್ಲಿ ನಾಗಪ್ಪನಜಡ್ಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಲುಸಂಕಕ್ಕೆ ಅಪ್ರೋಚ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಇದನ್ನೂ ಓದಿ: ಸಂಸದ ಕಾಗೇರಿ ನೇತೃತ್ವದಲ್ಲಿ ಕಾರವಾರದಲ್ಲಿ ಬಿಜೆಪಿ ಭಿಕ್ಷಾಟನೆ: ಕಾಂಗ್ರೆಸ್ ವಿರುದ್ಧ ಆಕ್ರೋಶ!
ಕ್ಯಾದಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಾವರ-ಮೆಣಸಿ ರಾಜ್ಯ ಹೆದ್ದಾರಿ-144ರಲ್ಲಿ ₹70 ಲಕ್ಷ ವೆಚ್ಚದಲ್ಲಿ ತಡೆಗೋಡೆ ಹಾಗೂ ಸಿಸಿ ಚರಂಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ದೊಡ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಸ್ವಿಗುಳಿ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿರುವ ಗಡಿಮನೆ ಹಳ್ಳಕ್ಕೆ ₹15 ಲಕ್ಷ ವೆಚ್ಚದಲ್ಲಿ ಕಾಲುಸಂಕ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಯಿತು.
ಒಟ್ಟು ₹405 ಲಕ್ಷ, ಅಂದರೆ ₹4.05 ಕೋಟಿ ವೆಚ್ಚದ ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಸ್ಥಳೀಯರ ಸಂಚಾರ ಸುರಕ್ಷತೆ ಹಾಗೂ ಸಂಪರ್ಕ ವ್ಯವಸ್ಥೆಗೆ ಅನುಕೂಲವಾಗಲಿದೆ. ಕ್ಷೇತ್ರದ ಜನರ ಸಂಚಾರ ಸುರಕ್ಷತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದೊಂದಿಗೆ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದ್ದಾರೆ.
ಕಾರ್ಯಕ್ರಮಗಳಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಸಹಕರಿಸಿದರು. ಅವರಿಗೆ ಶಾಸಕ ಭೀಮಣ್ಣ ನಾಯ್ಕ ಧನ್ಯವಾದ ಸಲ್ಲಿಸಿದ್ದಾರೆ.
