Spread the love

ಹಳಿಯಾಳ: ​ಹುಟ್ಟುಹಬ್ಬದ ಆಚರಣೆ ವೇಳೆ ಲಾಂಗ್ ಹಾಗೂ ಹರಿತವಾದ ಮಾರಕ ಆಯುಧಗಳನ್ನು ಹಿಡಿದು ಕೇಕ್ ಕತ್ತರಿಸಿ, ಮದ್ಯದ ಬಾಟಲಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ 8 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

​ನವೆಂಬರ್ 24ರಂದು ಸಂಜೆ 7 ಗಂಟೆಯ ಸುಮಾರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ವಿಡಿಯೋ ಪೊಲೀಸರ ಗಮನಕ್ಕೆ ಬಂದಿದೆ. ವಿಡಿಯೋದಲ್ಲಿ ಕೆಲವರು ಗುಂಪಾಗಿ ಸೇರಿಕೊಂಡು ಹುಟ್ಟುಹಬ್ಬ ಆಚರಿಸುವ ಸಂದರ್ಭದಲ್ಲಿ ಮಾರಕ ಆಯುಧಗಳನ್ನು ಕೈಯಲ್ಲಿ ಹಿಡಿದು ಕೇಕ್ ಕತ್ತರಿಸುವುದು, ಮದ್ಯದ ಬಾಟಲಿಗಳನ್ನು ಪ್ರದರ್ಶಿಸುವುದು ಹಾಗೂ ಕೂಗಾಡುತ್ತಾ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ.

​ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಬಿಎನ್‌ಎಸ್ ಅಡಿ ಪ್ರಕರಣ ದಾಖಲು

​ಮಾರಕ ಆಯುಧಗಳನ್ನು ಹಿಡಿದು ಗುಂಪಾಗಿ ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ಜನರಲ್ಲಿ ಭಯ ಹಾಗೂ ಆತಂಕ ಮೂಡಿಸುವುದಲ್ಲದೆ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯಿದೆ. ಇಂತಹ ಕೃತ್ಯಗಳು ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪದ ಅಪರಾಧಗಳಿಗೆ ಕಾರಣವಾಗಬಹುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

​ಈ ಕುರಿತು ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಭೀಮಪ್ಪ ಹನುಮಂತಪ್ಪ ಕದರಮಂಡಲಗಿ ನೀಡಿದ ದೂರಿನ ಮೇರೆಗೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ. 322/2026ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ (Arms Act-1959) ಕಲಂ 25(1)(B)(b) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 189(4), 191(2) ಮತ್ತು 190ರ ಅಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ವೈರಲ್ ವಿಡಿಯೋ ಆಧರಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *