ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಿರಂತರವಾಗಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬರೋಬ್ಬರಿ 6 ತಿಂಗಳ ಕಾಲ ಕಲಬುರ್ಗಿ ಜಿಲ್ಲೆಗೆ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಕಠಿಣ ಆದೇಶ ಹೊರಡಿಸಿದ್ದಾರೆ. ಅಂಕೋಲಾ ತಾಲೂಕಿನ ಕಸಬ ಕೇಣಿ ನಿವಾಸಿಯಾಗಿರುವ ಹಾಗೂ ವೃತ್ತಿಯಲ್ಲಿ ವ್ಯಾಪಾರಿಯಾಗಿರುವ ಶ್ಯಾಮ್ ಅಲಿಯಾಸ್ ಶ್ಯಾಮಸುಂದರ ಗೋಪಿನಾಥ ಭಂಟ್ (41) ಗಡಿಪಾರು ಶಿಕ್ಷೆಗೆ ಗುರಿಯಾದ ಕುಖ್ಯಾತ ಆರೋಪಿಯಾಗಿದ್ದಾನೆ.
ಈತನ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ 2011 ರಿಂದ 2025 ರವರೆಗೆ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 78(3) ರ ಅಡಿಯಲ್ಲಿ ಒಟ್ಟು 10 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಇಷ್ಟೊಂದು ಕ್ರಿಮಿನಲ್ ಪ್ರಕರಣಗಳಿದ್ದರೂ ಆತ ತನ್ನ ಕಾನೂನುಬಾಹಿರ ಚಟುವಟಿಕೆಗಳನ್ನು ಮತ್ತು ಪುಂಡಾಟಿಕೆಯನ್ನು ನಿರಂತರವಾಗಿ ಮುಂದುವರಿಸಿದ್ದನು. ಹೀಗಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಂಕೋಲಾ ಪೊಲೀಸರು ಆತನ ಚಲನವಲನಗಳ ಮೇಲೆ ತೀವ್ರ ನಿಗಾ ವಹಿಸಿದ್ದರು.
ಆರೋಪಿಯ ವರ್ತನೆಯಲ್ಲಿ ಯಾವುದೇ ಬದಲಾವಣೆ ಕಾಣದ ಹಿನ್ನೆಲೆಯಲ್ಲಿ, ಅಂಕೋಲಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು, ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆತನನ್ನು ಗಡಿಪಾರು ಮಾಡುವಂತೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿ, ಎರಡೂ ಪಕ್ಷಗಳ ವಾದ ಆಲಿಸಿದ ಬಳಿಕ, ಗಡಿಪಾರು ಕ್ರಮ ಅತ್ಯಗತ್ಯ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 55(A) ಅಡಿಯಲ್ಲಿ ಈ ಆದೇಶ ಹೊರಡಿಸಿದ್ದಾರೆ. ಆದೇಶದನ್ವಯ ಶ್ಯಾಮಸುಂದರನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ನಗರದ ಚೌಕ ಪೊಲೀಸ್ ಠಾಣಾ ವ್ಯಾಪ್ತಿಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದ್ದು, ಅಂಕೋಲಾ ಪೊಲೀಸರು ಆತನನ್ನು ಕಲಬುರ್ಗಿ ಪೊಲೀಸರ ವಶಕ್ಕೆ ಸುರಕ್ಷಿತವಾಗಿ ಒಪ್ಪಿಸಿದ್ದಾರೆ.
