ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೂವರೆ ವರ್ಷದ ಗಂಡು ಮಗು ಸ್ಥಳದಲ್ಲೇ ಮೃ*ತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃ*ತಪಟ್ಟ ದುರ್ದೈವಿ ಕಂದಮ್ಮನನ್ನು ಅರ್ಚಿತ್ ನಿತ್ಯಾನಂದ ತಾಂಡೇಲ ಎಂದು ಗುರುತಿಸಲಾಗಿದೆ.
ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಆಘಾತಕಾರಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಈ ಪೈಕಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಕ್ರಿಮ್ಸ್ (KRIMS) ಆಸ್ಪತ್ರೆಗೆ ತುರ್ತಾಗಿ ರವಾನಿಸಲಾಗಿದೆ. ಉಳಿದ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಭೀಕರ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಅಂಕೋಲಾ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಎರಡು ಬೃಹತ್ ವಾಹನಗಳ ನಡುವಿನ ಈ ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು, ಕೆಲಕಾಲ ವಾಹನ ಸವಾರರು ಪರದಾಡುವಂತಾಯಿತು.
