ಅಂಕೋಲಾ: ಅಡಿಕೆ ತೋಟವೊಂದರಲ್ಲಿ ಕಡವೆಯನ್ನು ಬೇಟೆಯಾಡಿ, ಅದರ ಮಾಂಸವನ್ನು ಚೀಲಗಳಲ್ಲಿ ತುಂಬುತ್ತಿದ್ದ ದುಷ್ಕರ್ಮಿಗಳ ತಂಡದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಕೋಲಾ ತಾಲೂಕಿನ ಕಲ್ಲೇಶ್ವರ ಗ್ರಾಮದ ಲಕ್ಷ್ಮಣ ಬಾಬು ಸಿದ್ದಿ ಎಂಬುವವರ ಅಡಿಕೆ ತೋಟದಲ್ಲಿ ಅಕ್ಟೋಬರ್ 16ರಂದು ರಾತ್ರಿ ಈ ಭರ್ಜರಿ ಕಾರ್ಯಾಚರಣೆ ನಡೆದಿದೆ. ರಾಮನಗುಳಿ ವಲಯದ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದಾಗ, ಆರು ಜನರ ತಂಡವೊಂದು ಕಡವೆಯನ್ನು ಕೊಂದು, ಚರ್ಮ ಬೇರ್ಪಡಿಸಿ ಮಾಂಸವನ್ನು ಪಾಲು ಮಾಡುತ್ತಿರುವುದು ಪತ್ತೆಯಾಗಿದೆ.
ದಾಳಿ ವೇಳೆ ಚನ್ನೇಮನೆಯ ನಾರಾಯಣ ಗುರಕ್ಯಾ ಸಿದ್ದಿ (60) ಎಂಬಾತನನ್ನು ಬಂಧಿಸಲಾಗಿದ್ದು, ಆತನನ್ನು ಅಂಕೋಲಾ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಉಳಿದ ಆರೋಪಿಗಳಾದ ಗಣೇಶ ರಾಮು ರಾಠೋಡ (27), ಲಕ್ಷ್ಮಣ ಬಾಬು ಸಿದ್ದಿ (55), ಲೋಕೇಶ ನಾರಾಯಣ ಸಿದ್ದಿ (50), ಶಿವರಾಜ ಲಕ್ಷ್ಮಣ ಸಿದ್ದಿ (30) ಹಾಗೂ ರಾಜು ಕೃಷ್ಣಾ ಸಿದ್ದಿ (45) ಪರಾರಿಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.
ಜಪ್ತಿಯಾದ ವಸ್ತುಗಳು: ಸ್ಥಳದಿಂದ ಕಡವೆಯ ಮಾಂಸ, ತಲೆ, ಕಾಲು, ಚರ್ಮ ಸೇರಿದಂತೆ ಇತರ ಅಂಗಾಂಗಗಳಿದ್ದ ಮೂರು ಚೀಲಗಳು, ಮೂರು ಕತ್ತಿ, ಒಂದು ಚಾಕು, ಹೆಡ್ಟಾರ್ಚ್ ಹಾಗೂ ಸುಮಾರು 1.5 ಲಕ್ಷ ರೂ. ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಎಸ್. ಮಾರಿಯಪ್ಪ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಫುಲ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ರಾಮನಗುಳಿ ವಲಯ ಅರಣ್ಯಾಧಿಕಾರಿ ದೀಪಕ್ ಎ. ನಾಯ್ಕ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.
