ಕುಮಟಾ: PhonePe ಮೂಲಕ ಹಣ ಪಾವತಿಸಿರುವುದಾಗಿ ನಕಲಿ ಸಂದೇಶ ತೋರಿಸಿ ಮೊಬೈಲ್ ಖರೀದಿಸಿ ಹಣ ನೀಡದೆ ಪರಾರಿಯಾಗಿದ್ದ ಆರೋಪಿಯನ್ನು ಕುಮಟಾ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಫೋರ್ಡ್ ಐಕಾನ್ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ.
2026ರ ಸೆಪ್ಟೆಂಬರ್ 10 ರಂದು ಮಧ್ಯಾಹ್ನ ಸುಮಾರು 2.50ರ ವೇಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಕುಮಟಾ ಹೊಸ ಬಸ್ ನಿಲ್ದಾಣದ ಪಕ್ಕದಲ್ಲಿರುವ ಮಾತೋಶ್ರೀ ಏಜೆನ್ಸಿಸ್ ಮೊಬೈಲ್ ಅಂಗಡಿಗೆ ಗ್ರಾಹಕನ ಸೋಗಿನಲ್ಲಿ ಬಂದಿದ್ದ. ₹16,700 ಮೌಲ್ಯದ ರಿಯಲ್ಮಿ ಸಿ-100 ಎಕ್ಸ್ ಡೀಪ್ ಬ್ಲೂ ಬಣ್ಣದ ಮೊಬೈಲ್ ಖರೀದಿಸಿ, PhonePe ಮೂಲಕ ಹಣ ಪಾವತಿಸಿರುವುದಾಗಿ ನಕಲಿ ಸಂದೇಶ ತೋರಿಸಿದ್ದ. ಆದರೆ ಹಣ ಪಾವತಿಸದೆ ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದ.
ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಲಂ 319(2)ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಆರೋಪಿಯ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಿ, ಸಿಸಿಟಿವಿ ದೃಶ್ಯಾವಳಿಗಳು ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ತನಿಖೆ ಮುಂದುವರಿಸಲಾಗಿತ್ತು.
ತನಿಖೆಯ ವೇಳೆ ಆರೋಪಿಯನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಲಿಂಗಮ್ಮನಹಳ್ಳಿ ಗ್ರಾಮದ ಕಿರಣಕುಮಾರ ಪಿ.ಪುಟ್ಟರಾಜು ಎಂದು ಗುರುತಿಸಲಾಗಿದೆ. ಆತನನ್ನು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಕೆಎ-04/ಎಂಡಿ-3771 ನೋಂದಣಿ ಸಂಖ್ಯೆಯ ಫೋರ್ಡ್ ಐಕಾನ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾರಿನ ಅಂದಾಜು ಮೌಲ್ಯ ₹1 ಲಕ್ಷ ಎಂದು ತಿಳಿಸಲಾಗಿದೆ.
ಆರೋಪಿಯನ್ನು ಬಂಧನದ ನಿಯಮಗಳನ್ನು ಪಾಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಈ ಕಾರ್ಯಾಚರಣೆಯು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಗಿರೀಶ್ ಎಸ್.ವಿ. ಅವರ ಮಾರ್ಗದರ್ಶನದಲ್ಲಿ ನಡೆದಿತ್ತು. ಕುಮಟಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಕುಸುಮಾಧರ ಕೆ. ಅವರ ನೇತೃತ್ವದಲ್ಲಿ ಪಿಎಸ್ಐಗಳಾದ ವಿಠಲ ಮಲವಡಕರ, ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿಗಳಾದ ಗಣೇಶ ನಾಯ್ಕ, ದಯಾನಂದ ನಾಯ್ಕ, ಗುರು ನಾಯಕ, ಕಿರಣ ನಾಯ್ಕ ಮತ್ತು ಸುಬ್ರಹ್ಮಣ್ಯ ಹೆಗಡೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆರೋಪಿಯನ್ನು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಕುಮಟಾ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಅಭಿನಂದಿಸಿದ್ದಾರೆ.
