ಜೋಯಿಡಾ: ತಾಲೂಕಿನ ಗುಂದ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಬೈಕ್ ಹಾಗೂ ಕ್ರೂಸರ್ ಟ್ರಾಕ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಯುವಕರು ಕಲಘಟಗಿಯಿಂದ ಪ್ರಸಿದ್ಧ ಉಳವಿ ದೇವಸ್ಥಾನಕ್ಕೆ ಭೇಟಿ ನೀಡಿ ತಮ್ಮೂರಿಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತದಲ್ಲಿ ಗಾಯಗೊಂಡ ಯುವಕರನ್ನು ವಿನಾಯಕ ಹಾಗೂ ಆಕಾಶ ಎಂದು ಗುರುತಿಸಲಾಗಿದೆ.
ಒಟ್ಟು ನಾಲ್ವರು ಗೆಳೆಯರು ಎರಡು ಪ್ರತ್ಯೇಕ ಬೈಕ್‌ಗಳಲ್ಲಿ ಉಳವಿ ಚನ್ನಬಸವೇಶ್ವರನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ, ಎದುರಿನಿಂದ ಬಂದ ಕ್ರೂಸರ್ ವಾಹನ ಇವರ ಬೈಕ್‌ಗೆ ಬಲವಾಗಿ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಯುವಕರು ರಸ್ತೆಗೆ ಉರುಳಿಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತವನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಗಾಯಾಳುಗಳನ್ನು ರಕ್ಷಿಸಿ ದಾಂಡೇಲಿಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಾಯಾಳುಗಳ ಪೈಕಿ ಓರ್ವನ ತಲೆ ಹಾಗೂ ಕೈಗೆ ತೀವ್ರ ಸ್ವರೂಪದ ಪೆಟ್ಟಾಗಿರುವುದರಿಂದ, ಆಸ್ಪತ್ರೆಯ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಧಾರವಾಡದ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ವಾಹನ ಚಾಲಕನ ನಿರ್ಲಕ್ಷ್ಯದ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.
