Spread the love

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಜನತಾ ಕಾಲೋನಿ ಸಮೀಪದ ತಿರುವಿನಲ್ಲಿ ರವಿವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರವಾಸಿಗರಿದ್ದ ಕಾರೊಂದು ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೋಲಾರ ಮೂಲದ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಕಾರಿನಲ್ಲಿದ್ದ ಇತರ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೋಲಾರದಿಂದ ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಸ್ನೇಹಿತರ ತಂಡವು ಭಾನುವಾರ ರಾತ್ರಿ ಸುಮಾರು 10:30ರ ಹೊತ್ತಿಗೆ ಪ್ರವಾಸ ಮುಗಿಸಿ ತಮ್ಮೂರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಜನತಾ ಕಾಲೋನಿ ಬಳಿಯ ಅಪಾಯಕಾರಿ ತಿರುವಿನಲ್ಲಿ ಅತಿವೇಗದಲ್ಲಿ ಸಾಗುತ್ತಿದ್ದ ಕಾರು, ದಿಢೀರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೃಹತ್ ಮರಕ್ಕೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನುಚ್ಚುನೂರಾಗಿದ್ದು, ಮರಕ್ಕೂ ಭಾರಿ ಹಾನಿಯಾಗಿದೆ. ಅಪಘಾತದ ಭೀಕರ ದೃಶ್ಯ ಹಾಗೂ ವಾಹನದ ಸ್ಥಿತಿಯನ್ನು ಕಂಡು ಸ್ಥಳೀಯರು ಕೆಲಕಾಲ ಆತಂಕಗೊಂಡು ಬೆಚ್ಚಿಬಿದ್ದಿದ್ದರು.

ಅಪಘಾತದ ಮಾಹಿತಿ ತಿಳಿದ ತಕ್ಷಣ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಜಗದೀಶ್ ಹಾಗೂ ಅವರ ತಂಡದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಸ್ಥಳೀಯರ ನೆರವಿನಿಂದ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ತಕ್ಷಣವೇ ರಕ್ಷಿಸಿ ದಾಂಡೇಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಧಾರವಾಡದ ಆಸ್ಪತ್ರೆಗೆ ರವಾನಿಸಲಾಗಿದೆ.

ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಈ ಅಪಘಾತಕ್ಕೆ ಪ್ರಮುಖ ಕಾರಣವೆಂದು ಶಂಕಿಸಲಾಗಿದ್ದು, ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *