Spread the love

ಹಳಿಯಾಳ: ತಾಲೂಕಿನ ಅಂಚಿನ ಮದ್ನಳ್ಳಿ ಗ್ರಾಮದ ಬಳಿ ಖಾನಾಪುರ-ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಈ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ 5 ಮಂದಿ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅಳ್ನಾವರ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಹಳಿಯಾಳದತ್ತ ಬರುತ್ತಿದ್ದ ಟ್ರಕ್‌ಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದೊಳಗೆ ಸಿಲುಕಿದ್ದ ಸವಾರರು ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದರು. ತಕ್ಷಣವೇ ನೆರವಿಗೆ ಧಾವಿಸಿದ ಸ್ಥಳೀಯರು ಹಾಗೂ ತುರ್ತು ಸೇವಾ ಸಿಬ್ಬಂದಿಯ ಸಹಾಯದಿಂದ ಗಾಯಾಳುಗಳನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ವೈದ್ಯರು ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಘಟನಾ ಸ್ಥಳಕ್ಕೆ 112 ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಅಪಘಾತದ ಪರಿಣಾಮವಾಗಿ ಖಾನಾಪುರ-ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಳಿಕ ವಾಹನಗಳನ್ನು ತೆರವುಗೊಳಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಘಟನೆ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *