Spread the love

ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 (SIR) ಅಂಗವಾಗಿ ಉತ್ತರ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಸೋಮವಾರ ಕಾರವಾರ ನಗರದಲ್ಲಿ ಬೃಹತ್ ಮತದಾರರ ಜಾಗೃತಿ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ನಗರದ ಜಿಲ್ಲಾ ಪಂಚಾಯತ್ ಆವರಣದಿಂದ ಆರಂಭವಾದ ಈ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಸಿಇಓ ಡಾ. ದಿಲೀಶ್ ಶಶಿ ಅವರು ‘ಸ್ವೀಪ್’ (SVEEP) ಬಾವುಟವನ್ನು ಪ್ರದರ್ಶಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.

ಈ ಜಾಗೃತಿ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು, ಮೆರವಣಿಗೆಯಲ್ಲಿ ಹೆಜ್ಜೆ ಹಾಕುವ ಮೂಲಕ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡುವುದು, ತಿದ್ದುಪಡಿ ಮಾಡಿಕೊಳ್ಳುವುದು ಹಾಗೂ ಕಡ್ಡಾಯ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಿದರು.

ಮೆರವಣಿಗೆಯುದ್ದಕ್ಕೂ “ದೋಷರಹಿತ ಮತದಾರರ ಪಟ್ಟಿ – ಬಲವಾದ ಪ್ರಜಾಪ್ರಭುತ್ವ” ಹಾಗೂ “ಯಾವುದೇ ಅರ್ಹ ಮತದಾರ ಮತದಾನದಿಂದ ಹೊರಗುಳಿಯಬಾರದು” ಎಂಬ ಅರ್ಥಪೂರ್ಣ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರ ಗಮನ ಸೆಳೆಯಲಾಯಿತು. ಮುಂಬರುವ ದಿನಗಳಲ್ಲಿ ನಡೆಯಲಿರುವ ಚುನಾವಣೆಗಳ ದೃಷ್ಟಿಯಿಂದ, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆಯ ಯಶಸ್ಸಿಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ಅಧಿಕಾರಿಗಳು ಇದೇ ವೇಳೆ ಮನವಿ ಮಾಡಿದರು.

ಜಾಗೃತಿ ಮೆರವಣಿಗೆಯಲ್ಲಿ ಜಿಲ್ಲಾ ಪಂಚಾಯತ್‌ನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ, ಮೆಡಿಕಲ್, ನರ್ಸಿಂಗ್ ಹಾಗೂ ನಗರದ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯತ್ ಆವರಣದಿಂದ ಹೊರಟ ಈ ಬೃಹತ್ ಮೆರವಣಿಗೆಯು ಪಿಕಳೆ ರಸ್ತೆ, ಎಂ.ಜಿ. ರಸ್ತೆ, ಸುಭಾಷ್ ವೃತ್ತ, ಸವಿತಾ ಸರ್ಕಲ್ ಮಾರ್ಗವಾಗಿ ಕಾರವಾರ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಎಸ್‌ಐಆರ್ (SIR) ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.

Leave a Reply

Your email address will not be published. Required fields are marked *