ಕಾರವಾರ: ನೈಸರ್ಗಿಕ ವಿಕೋಪಗಳಿಂದ ರೈತರಿಗೆ ಉಂಟಾಗುವ ಬೆಳೆಹಾನಿಯ ನಷ್ಟವನ್ನು ತಪ್ಪಿಸಲು ಜಾರಿಗೆ ತರಲಾಗಿರುವ ‘ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ಯಡಿ (PMFBY) ಅರ್ಹ ರೈತರೆಲ್ಲರೂ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಕರೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, 2026ನೇ ಸಾಲಿನ ಯೋಜನೆಯ ಕುರಿತು ರೈತರಲ್ಲಿ ಅರಿವು ಮೂಡಿಸುವ ಜಾಗೃತಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ನೋಂದಣಿ ಪ್ರಕ್ರಿಯೆ ಚುರುಕುಗೊಳಿಸಲು ಸೂಚನೆ
ಬೆಳೆಹಾನಿ ನಷ್ಟವನ್ನು ಭರಿಸಲು ರೈತರಿಗೆ ಈ ಯೋಜನೆ ಅತ್ಯಂತ ಸಹಕಾರಿಯಾಗಿದೆ. ಹೀಗಾಗಿ ಕೃಷಿ ಇಲಾಖೆ, ಸಂಬಂಧಿತ ಅಧಿಕಾರಿಗಳು ಹಾಗೂ ವಿಮಾ ಕಂಪನಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ತಳಮಟ್ಟದಲ್ಲಿ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯ ಗರಿಷ್ಠ ಸಂಖ್ಯೆಯ ರೈತರನ್ನು ಈ ವಿಮಾ ಯೋಜನೆಯ ವ್ಯಾಪ್ತಿಗೆ ತರಬೇಕು. ಈ ಕೂಡಲೇ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಪ್ಕೋ ಟೋಕಿಯೋ ವಿಮಾ ಕಂಪನಿಗೆ ಜವಾಬ್ದಾರಿ
ಪ್ರಸಕ್ತ 2026ನೇ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ‘ಇಪ್ಕೋ ಟೋಕಿಯೋ’ (IFFCO Tokio) ವಿಮಾ ಕಂಪನಿಗೆ ವಹಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಲಾಯಿತು.
ಈ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ದೀಪನ್ ಎಂ.ಎನ್., ಜಿ.ಪಂ. ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೆಸ್ತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವ್ಕರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ್ ರೇವಣಕರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಮೇಶ್ ಉಪಸ್ಥಿತರಿದ್ದರು. ಇವರೊಂದಿಗೆ ಇಪ್ಕೋ ಟೋಕಿಯೋ ವಿಮಾ ಕಂಪನಿಯ ಉತ್ತರ ಕನ್ನಡ ಜಿಲ್ಲಾ ಸಂಯೋಜಕ ರವೀಂದ್ರ ಮೊಗವೀರ ಹಾಗೂ ವಿವಿಧ ತಾಲೂಕುಗಳ ವಿಮಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
