Spread the love

ಕಾರವಾರ: ತಾಲೂಕಿನ ಚಿತ್ತಾಕುಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಂಪಳಕಟ್ಟಾ–ಕಣಸಗಿರಿ ರಸ್ತೆ ತೀರಾ ಹದಗೆಟ್ಟು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ದುಸ್ತರವಾಗಿತ್ತು. ರಸ್ತೆಯುದ್ದಕ್ಕೂ ನಿರ್ಮಾಣವಾಗಿದ್ದ ಬೃಹತ್ ಗುಂಡಿಗಳಿಂದಾಗಿ ವಾಹನ ಸವಾರರು ದಿನನಿತ್ಯ ಪರದಾಡುವಂತಾಗಿದ್ದು, ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಒಗ್ಗಟ್ಟಾಗಿ ಲೋಕೋಪಯೋಗಿ (PWD) ಇಲಾಖೆಗೆ ಮನವಿ ಸಲ್ಲಿಸಿ, ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ 

ಪಿಂಪಳಕಟ್ಟಾ–ಕಣಸಗಿರಿ ಮಾರ್ಗವು ಈ ಭಾಗದ ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಸ್ಥಳೀಯರು ನಿತ್ಯ ಇದೇ ಮಾರ್ಗವನ್ನು ಅವಲಂಬಿಸಿದ್ದಾರೆ. ಮಳೆಗಾಲದ ಕಾರಣ ರಸ್ತೆ ಸಂಪೂರ್ಣ ಕೆಸರುಮಯವಾಗಿ, ಗುಂಡಿಗಳಲ್ಲಿ ನೀರು ನಿಂತು ವಾಹನ ಸವಾರರು ಬಿದ್ದು ಗಾಯಗೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದವು. ಅಲ್ಲದೆ, ಗಣೇಶೋತ್ಸವ ಸೇರಿದಂತೆ ಪ್ರಮುಖ ಹಬ್ಬಗಳು ಸಮೀಪಿಸುತ್ತಿರುವುದರಿಂದ ಜನಸಂದಣಿ ಹೆಚ್ಚಾಗುವ ಸಾಧ್ಯತೆಯಿದ್ದು, ತಕ್ಷಣ ರಸ್ತೆ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು.

ಮಂಗಳವಾರದಿಂದ ಕಾಮಗಾರಿ ಆರಂಭದ ಭರವಸೆ 

ಗ್ರಾಮಸ್ಥರ ಮನವಿಗೆ ತಕ್ಷಣ ಸ್ಪಂದಿಸಿದ ಪಿಡಬ್ಲ್ಯೂಡಿ ಎಇಇ ರಾಮು ಅರ್ಗೆಕರ್ ಅವರು ಖುದ್ದು ಸ್ಥಳಕ್ಕೆ ಭೇಟಿ ನೀಡಿ, ರಸ್ತೆಯ ದುಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಬಳಿಕ ಗ್ರಾಮಸ್ಥರೊಂದಿಗೆ ಮಾತನಾಡಿ, ಮಂಗಳವಾರದಿಂದಲೇ ರಸ್ತೆ ದುರಸ್ತಿ ಕಾಮಗಾರಿಯನ್ನು ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ. 

ಈ ವೇಳೆ ಸ್ಥಳೀಯ ಪ್ರಮುಖರಾದ ರಾಕೇಶ್ ಆಚಾರಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಸೂರಜ್ ದೇಸಾಯಿ, ಅಶೋಕ್ ರಾಣೆ, ಗುರು ಸಾವಂತ್, ಅರುಣ್ ಮಹಾಲೆ ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು. ಗುಣಮಟ್ಟದ ಕಾಮಗಾರಿ ನಡೆಸಿ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಈ ವೇಳೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *