ಕಾರವಾರ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಖಂಡಿಸಿ ಹಾಗೂ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ತಕ್ಷಣವೇ ವಜಾಗೊಳಿಸುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯು ಇದೀಗ ಆರನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಬೃಹತ್ ಧರಣಿ ನಡೆಯಿತು.
ಕುಮಟಾ, ಹೊನ್ನಾವರ ಹಾಗೂ ಗೋಕರ್ಣ ಮಂಡಲಗಳಿಂದ ಆಗಮಿಸಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಪ್ರತಿಭಟನೆ ಆರಂಭಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ದಿನಕರ ಶೆಟ್ಟಿ, ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬೃಹತ್ ಅವ್ಯವಹಾರ ಜಗಜ್ಜಾಹೀರಾಗಿದೆ. ಈ ಹಿಂದೆ ಬಿಜೆಪಿ ನಡೆಸಿದ ಹೋರಾಟಕ್ಕೆ ಮಣಿದು ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು.
ಆದರೆ, ಇದೀಗ ಮತ್ತೆ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದು ರಾಜ್ಯ ಸರ್ಕಾರದ ದುರದೃಷ್ಟಕರ ನಡೆಯಾಗಿದೆ. ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲವೇ ಮುಖ್ಯಮಂತ್ರಿಗಳು ಅವರನ್ನು ವಜಾಗೊಳಿಸಬೇಕು ಎಂದು ತೀವ್ರವಾಗಿ ಆಗ್ರಹಿಸಿದರು.
ವಕೀಲ ನಾಗರಾಜ ನಾಯಕ ಮಾತನಾಡಿ, ಪರಿಶಿಷ್ಟ ಜನಾಂಗದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಕೋಟ್ಯಂತರ ರೂಪಾಯಿ ಹಣವನ್ನು ಬೇರೆಡೆಗೆ ವರ್ಗಾಯಿಸಿದ ಗಂಭೀರ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರಿಗೆ ಸಚಿವ ಸಂಪುಟದಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ನಿಕಟಪೂರ್ವ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಅವರು ಸಚಿವರ ರಾಜೀನಾಮೆಗೆ ಪಟ್ಟು ಹಿಡಿದರು.
ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗಾ ಅಧ್ಯಕ್ಷತೆ ವಹಿಸಿದ್ದ ಈ ಧರಣಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ ಸ್ವಾಗತ ಕೋರಿದರು. ಜಿಲ್ಲಾ ಉಪಾಧ್ಯಕ್ಷ ಸುಬ್ರಾಯ ವಾಳ್ಕೆ, ಜಿಲ್ಲಾ ಕಾರ್ಯದರ್ಶಿ ಕಮಲಾ ನಾಯ್ಕ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಗೀತಾ ಶಿಕಾರಿಪುರ, ಸುಜಾತ ಬಾದೇಕರ್, ಕುಮಟಾ ಮಂಡಲ ಅಧ್ಯಕ್ಷರಾದ ಜಿ. ಐ .ಹೆಗಡೆ, ಹೊನ್ನಾವರ ಮಂಡಲ ಅಧ್ಯಕ್ಷರಾದ ಯೋಗೇಶ್ ಮೇಸ್ತ, ಗೋಕರ್ಣ ಮಂಡಲ ಅಧ್ಯಕ್ಷರಾದ ಗಣೇಶ ಪಂಡಿತ್, ರಾಜ್ಯ ಶಿಕ್ಷಣ ಪ್ರಕೋಸ್ಟ ಸಹ ಸಂಚಾಲಕರಾದ ಎಂ ಜಿ ಭಟ್, ರಾಜ್ಯ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಸ್ಟ ಸದಸ್ಯರಾದ ಮಂಜುನಾಥ ಜನ್ನು,ಹೊನ್ನಾವರ ಮಂಡಲ ನಿಕಟಪೂರ್ವ ಅಧ್ಯಕ್ಷರಾದ ರಾಜು ಭಂಡಾರಿ ಕಾರ್ಯಕ್ರಮ ನಿರೂಪಿಸಿದರು,
ಮಾಧ್ಯಮ ಸಹ ಸಹ ಸಂಚಾಲಕ ಕಿಶನ್ ಕಾಂಬಳೆ, ಕುಮಟಾ ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಹೇಮಂತ್ ಕುಮಾರ್ ಗಾಂವ್ಕರ್, ಗಜಾನನ ಪೈ, ಮಹೇಶ ದೇಶಭಂಡಾರಿ, ದೇವು ಗೌಡ ಹಾಗೂ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
