ಶಿರಸಿ: ತಾಲೂಕಿನ ಕಾನಗೋಡ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಂಗ್ರಹಿಸಿ ಕೆತ್ತನೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಬರೋಬ್ಬರಿ 33.390 ಕೆ.ಜಿ. ತೂಕದ ಬೆಲೆಬಾಳುವ ಶ್ರೀಗಂಧದ ತುಂಡುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅಕ್ರಮ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಓರ್ವ ಆರೋಪಿ ಸೆರೆ, ಮತ್ತೋರ್ವನಿಗಾಗಿ ಶೋಧ
ದಾಳಿಯ ವೇಳೆ ಕಾನಗೋಡ ಗ್ರಾಮದ ಜನತಾ ಕಾಲೋನಿಯ ನಿವಾಸಿ ದಯಾನಂದ ನಾರಾಯಣ ನಾಯ್ಕ (48) ಎಂಬಾತನನ್ನು ಬಂಧಿಸಲಾಗಿದೆ. ಆದರೆ, ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ಮಶಿಗದ್ದೆ ಗ್ರಾಮದ ಮಂಜುನಾಥ ಅಣ್ಣಪ್ಪ ದೇವಾಡಿಗ (47) ಎಂಬಾತ ಅರಣ್ಯ ಇಲಾಖೆ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ. ಬಂಧಿತ ಆರೋಪಿ ದಯಾನಂದನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತಲೆಮರೆಸಿಕೊಂಡಿರುವ ಮಂಜುನಾಥನ ಬಂಧನಕ್ಕಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳು
ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಸಂದೀಪ್ ಹೆಚ್. ಸೂರ್ಯವಂಶಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಅಮಿತ್ಕುಮಾರ್ ಚವ್ಹಾಣ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ಅರಣ್ಯಾಧಿಕಾರಿ ಭವ್ಯಾ ನಾಯ್ಕ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ್ ನಾರ್ವೆಕರ ಹಾಗೂ ಅರಣ್ಯ ವನಪಾಲಕರಾದ ರೋಹಿತ್ ಎಂ. ನಾಯ್ಕ, ಮಂಜುನಾಥ ಜಹಗೀರದಾರ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಪಾಲ್ಗೊಂಡು ಅಕ್ರಮವನ್ನು ಪತ್ತೆಹಚ್ಚಿದ್ದಾರೆ.
