ಸಿದ್ದಾಪುರ: ತಾಲೂಕಿನ ಮಾವಿನಗುಂಡಿ ವಲಯದ ಹಲಗೇರಿ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಂದೂಕಿನಿಂದ ವನ್ಯಜೀವಿಗಳನ್ನು ಬೇಟೆಯಾಡಿ ಸಾಗಿಸುತ್ತಿದ್ದ ಮೂವರು ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರು ಕಡವೆ ಹಾಗೂ ಬರ್ಕ ಪ್ರಾಣಿಗಳನ್ನು ಗುಂಡಿಕ್ಕಿ ಕೊಂದು ವಾಹನದಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು.
ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಹುಸೂರು ಗ್ರಾಮದ ಅರಣ್ಯ ಸರ್ವೆ ನಂ. 210ರ ಗದ್ದೆಗಳಿಗೆ ತೆರಳುವ ಕಚ್ಚಾ ರಸ್ತೆಯಲ್ಲಿ ವಾಹನವನ್ನು ತಡೆದು ತಪಾಸಣೆ ನಡೆಸಿದರು. ಈ ವೇಳೆ ಮಹೀಂದ್ರಾ ಪಿಕಪ್ ವಾಹನದ (KA-17 B-4291) ಒಳಗೆ ಗುಂಡೇಟಿನಿಂದ ಮೃತಪಟ್ಟಿದ್ದ ಒಂದು ಹೆಣ್ಣು ಕಡವೆ ಹಾಗೂ ಒಂದು ಗಂಡು ಬರ್ಕ ಪತ್ತೆಯಾಗಿವೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಮೃತ ವನ್ಯಜೀವಿಗಳು, ಬೇಟೆಗೆ ಬಳಸಿದ್ದ ಬಂದೂಕು ಮತ್ತು ಸಾಗಾಟಕ್ಕೆ ಬಳಸಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆ ವೇಳೆ ಹುಸೂರು ನಿವಾಸಿ ವಿರೇಂದ್ರ ಮಾರುತಿ ನಾಯ್ಕ, ಕುಂಬಾರಕುಳಿಯ ಶಿವಾನಂದ ಮಹಾಬಲೇಶ್ವರ ನಾಯ್ಕ ಹಾಗೂ ಸುಂಕತ್ತಿಯ ವಾಸುದೇವ ಈರ ನಾಯ್ಕ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳ ವಿರುದ್ಧ ಅತ್ಯಂತ ಕಠಿಣವಾದ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಘಟನಾ ಸ್ಥಳಕ್ಕೆ ದಾಂಡೇಲಿಯ ವನ್ಯಜೀವಿ ವಿಧಿವಿಜ್ಞಾನ ತಜ್ಞರಾದ ಮಧುಸೂದನ ಎಸ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಗೆ ಅಗತ್ಯವಿರುವ ವೈಜ್ಞಾನಿಕ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.
ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹೆಚ್. ಸೂರ್ಯವಂಶಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪವಿತ್ರಾ ಯು.ಜೆ. ಅವರ ಮಾರ್ಗದರ್ಶನದಲ್ಲಿ, ಸಿದ್ದಾಪುರ ವಲಯ ಅರಣ್ಯಾಧಿಕಾರಿ ಅಜಯಕುಮಾರ ಎಮ್.ಎಸ್. ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
