ಕಾರವಾರ: ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರ ವಿಧಾನಸೌಧದ ನೂತನ ಕಚೇರಿಯಲ್ಲಿ ಗುರುವಾರ ದೇವತಾ ಪ್ರಾರ್ಥನೆ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು. ಈ ಶುಭ ಸಂದರ್ಭದಲ್ಲಿ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಅವರು ಪಾಲ್ಗೊಂಡು ಸಚಿವರಿಗೆ ಶುಭ ಕೋರಿದರು.
ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ನೂತನ ಕಚೇರಿಯಲ್ಲಿ (ಕೊಠಡಿ ಸಂಖ್ಯೆ 262, 262-A) ನಡೆದ ಸರಳ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಶಾಸಕ ಭೀಮಣ್ಣ ನಾಯ್ಕ ಅವರು ಸಚಿವರ ಕಾರ್ಯವೈಖರಿಗೆ ಬೆಂಬಲ ವ್ಯಕ್ತಪಡಿಸಿದರು.
‘ಗುಣಮಟ್ಟದ ಶಿಕ್ಷಣ ಒದಗಿಸಲು ನಮ್ಮ ಬೆಂಬಲವಿದೆ’
ಕಾರ್ಯಕ್ರಮದಲ್ಲಿ ಮಾತನಾಡಿದ ಭೀಮಣ್ಣ ನಾಯ್ಕ, “ನಮ್ಮ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಹಾಗೂ ಸಕಾರಾತ್ಮಕ ಬದಲಾವಣೆಗಳನ್ನು ತರಬೇಕಿದೆ. ನಾಡಿನ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಸಚಿವ ಮಧು ಬಂಗಾರಪ್ಪ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಹಾಗೂ ಆಶೀರ್ವಾದ ಸದಾ ಇರಲಿದೆ. ಮುಂದಿನ ದಿನಗಳಲ್ಲಿ ಅವರ ನೇತೃತ್ವದಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರವು ಮತ್ತಷ್ಟು ಸಾಧನೆಯ ಶಿಖರಕ್ಕೇರಲಿ” ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ, ಪಕ್ಷದ ಹಿರಿಯ ನಾಯಕರು, ಶಿಕ್ಷಣ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು, ಕಚೇರಿಯ ಸಿಬ್ಬಂದಿ ವರ್ಗ ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದು ನೂತನ ಸಚಿವರಿಗೆ ಶುಭ ಹಾರೈಸಿದರು.
