ಹೊನ್ನಾವರ:ಮೈಸೂರಿನ ಶಾಲಾ ವಿದ್ಯಾರ್ಥಿಗಳನ್ನು ಹೊತ್ತ ಪ್ರವಾಸಿ ಬಸ್ಸೊಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮೀಪದ ಗೇರುಸೊಪ್ಪ ಬಳಿಯ ಸೂಳೆ ಮುರ್ಕಿ ಕ್ರಾಸ್ ಬಳಿ ಭೀಕರವಾಗಿ ಪಲ್ಟಿಯಾಗಿದ್ದು, ಈ ದುರಂತದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಮೃತನನ್ನು ಮೈಸೂರಿನ ಟಿ.ಕೆ. ಲೇಔಟ್‌ನ ತರಳಾಬಾಳು ಪ್ರೌಢಶಾಲೆಯ ವಿದ್ಯಾರ್ಥಿ ಪವನ್ (15) ಎಂದು ಗುರುತಿಸಲಾಗಿದ್ದು, ಈತ ತನ್ನ ಹುಟ್ಟುಹಬ್ಬದ ದಿನವೇ ಅಪಘಾತದಲ್ಲಿ ಸಾವನ್ನಪ್ಪಿದ್ದು ಮಾತ್ರ ದುಃಖದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಜೋಗಜಲಪಾತದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ!
ಮೈಸೂರಿನಿಂದ ಪ್ರವಾಸಕ್ಕೆ ಬಂದಿದ್ದ ಈ ವಿದ್ಯಾರ್ಥಿಗಳ ತಂಡವು ಜೋಗ್ ಜಲಪಾತದ ವೀಕ್ಷಣೆ ಮುಗಿಸಿ,ಗೋಕರ್ಣ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಸೂಳೆ ಮುರ್ಕಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಘಟನಾ ಸಮಯದಲ್ಲಿ ವಾಹನದಲ್ಲಿ ಒಟ್ಟು 50 ಮಂದಿ (ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ) ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಅಪಘಾತ ಸಂಭವಿಸಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಪಿಐ ಸಿದ್ದರಾಮೇಶ್ವರ, ಪಿಎಸೈ ಮಂಜುನಾಥ ಪೊಲೀಸ್ ಸಿಬ್ಬಂದಿಗಳು ಸ್ಥಳಿಯರ ಸಹಕಾರದ ಮೇರೆಗೆ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಹೊನ್ನಾವರದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕೆಲ ವಿದ್ಯಾರ್ಥಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ ಎನ್ನಲಾಗಿದೆ.

ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಹಾಯಕ ಆಯುಕ್ತರಾದ (ಎಸಿ) ಕಾವ್ಯಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೆಯೇ ತಹಶೀಲ್ಧಾರ ಪ್ರವೀಣ ಕರಾಂಡೆ, ಇಓ ಪುಟ್ಟೆಗೌಡ, ಪ.ಪಂ.ಮುಖ್ಯಾಧಿಕಾರಿ ಯೇಸು ಬೆಂಗಳೂರು ಮತ್ತು ಬಿಇಒ ವಿನಾಯಕ ಅವಧಾನಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ಒದಗಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಹೆದ್ದಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶ!
ಘಟನೆ ನಡೆದ ಸುಳೆ ಮುರ್ಕಿ ಕ್ರಾಸ್ ಈಗಾಗಲೇ ಅಪಘಾತಗಳ ಹಾಟ್ ಸ್ಪಾಟ್ ಆಗಿ ಕುಖ್ಯಾತಿ ಗಳಿಸಿದೆ. ರಸ್ತೆಯ ಅವೈಜ್ಞಾನಿಕ ಕಾಮಗಾರಿ ಮತ್ತು ಇಲಾಖೆಯ ನಿರ್ವಹಣಾ ಲೋಪ ಈ ರೀತಿಯ ಸರಣಿ ಅಪಘಾತಗಳಿಗೆ ಕಾರಣ ಎಂದು ಸ್ಥಳೀಯರು ಮತ್ತು ವಿದ್ಯಾರ್ಥಿಗಳ ಪೋಷಕರು ಹೆದ್ದಾರಿ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ಅಪಘಾತ ತಡೆಯಲು ಶಾಶ್ವತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.


