ಕಾರವಾರ: ಕರಾವಳಿ ಮತ್ತು ಮಲೆನಾಡು ಭಾಗದ ಪ್ರಮುಖ ಜೀವನಾಡಿಯಾಗಿರುವ ಕೊಂಕಣ ರೈಲ್ವೆಯ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟವು 7,760 ಕೋಟಿ ರೂಪಾಯಿಗಳ ವಿಶೇಷ ಅನುದಾನಕ್ಕೆ ಅಂತಿಮ ಅನುಮೋದನೆ ನೀಡಿರುವುದನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ಲಾಘಿಸಿದ್ದಾರೆ. ಕೇಂದ್ರ ಸರ್ಕಾರದ ಈ ಮಹತ್ವದ ನಿರ್ಧಾರದಿಂದ ಕೊಂಕಣ ರೈಲ್ವೆ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳು ಮತ್ತಷ್ಟು ಬಲಗೊಳ್ಳಲಿದ್ದು, ಪ್ರಯಾಣಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ರೈಲ್ವೆ ಅಭಿವೃದ್ಧಿಯ ಜೊತೆಗೆ ಕರಾವಳಿ ಭಾಗದ ಆರ್ಥಿಕ ಚಟುವಟಿಕೆ, ವಾಣಿಜ್ಯ ಹಾಗೂ ಪ್ರವಾಸೋದ್ಯಮದ ಬೆಳವಣಿಗೆಗೂ ಈ ಯೋಜನೆ ದೊಡ್ಡ ಮಟ್ಟದಲ್ಲಿ ಉತ್ತೇಜನ ನೀಡಲಿದೆ. ಕರಾವಳಿ ಜನತೆಯ ಬಹುದಿನಗಳ ಕನಸಿಗೆ ಜೀವ ತುಂಬಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಸಂಸದರು ವಿಶೇಷ ಕೃತಜ್ಞತೆ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ನವದೆಹಲಿಗೆ ತೆರಳಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಸಂಸದ ಕಾಗೇರಿ, ಉತ್ತರ ಕನ್ನಡ ಕ್ಷೇತ್ರದ ಪ್ರಮುಖ ರೈಲ್ವೆ ಬೇಡಿಕೆಗಳು ಹಾಗೂ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಅಧಿಕೃತ ಮನವಿ ಪತ್ರ ಸಲ್ಲಿಸಿದರು.
ಪ್ರಮುಖವಾಗಿ ತಾಳಗುಪ್ಪ-ಹುಬ್ಬಳ್ಳಿ ರೈಲ್ವೆ ಯೋಜನೆಗೆ ಹೆಚ್ಚಿನ ವೇಗ ನೀಡುವಂತೆ ಒತ್ತಾಯಿಸಿದ ಅವರು, ಬಹುನಿರೀಕ್ಷಿತ ಅಂಕೋಲಾ-ಹುಬ್ಬಳ್ಳಿ, ತಾಳಗುಪ್ಪ-ಹೊನ್ನಾವರ ಹಾಗೂ ಧಾರವಾಡ-ಕಿತ್ತೂರು-ಬೆಳಗಾವಿ ರೈಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಸಚಿವರಲ್ಲಿ ವಿಶೇಷವಾಗಿ ಮನವಿ ಮಾಡಿಕೊಂಡರು.
ಇದರ ಜೊತೆಗೆ ಕೊಂಕಣ ರೈಲ್ವೆ ಮಾರ್ಗದಲ್ಲಿ ಪ್ರಸ್ತುತ ಸಂಚರಿಸುತ್ತಿರುವ ಆಯ್ದ ಪ್ರಮುಖ ರೈಲುಗಳ ಮಾರ್ಗವನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಕಾಗೇರಿ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ಸ್ಟೇಷನ್ ಯೋಜನೆ’ಯ ಅಡಿಯಲ್ಲಿ ಖಾನಾಪುರ ರೈಲ್ವೆ ನಿಲ್ದಾಣವನ್ನು ಸೇರ್ಪಡೆಗೊಳಿಸಿ, ಅದನ್ನು ಆಧುನಿಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಬೇಕು ಹಾಗೂ ಖಾನಾಪುರದಲ್ಲಿ ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಬೇಕು ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಸಂಸದರ ಬೇಡಿಕೆಗಳಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉಲ್ಲೇಖಿಸಲಾದ ಎಲ್ಲಾ ಯೋಜನೆಗಳು ಹಾಗೂ ಬೇಡಿಕೆಗಳ ಕುರಿತು ಅಧಿಕಾರಿಗಳ ಮಟ್ಟದಲ್ಲಿ ತ್ವರಿತ ಪರಿಶೀಲನೆ ನಡೆಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ದೃಢ ಭರವಸೆ ನೀಡಿದ್ದಾರೆ.
