ಕಾರವಾರ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು (ಸೆ. 24) ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ 30 ರಿಂದ 40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ.
ಹವಾಮಾನ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ಸಜ್ಜುಗೊಳಿಸಲಾಗಿದೆ. ಹವಾಮಾನದ ತಾಜಾ ಮಾಹಿತಿಗಾಗಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣಗಳು ಹಾಗೂ ಸ್ಥಳೀಯ ಸುದ್ದಿಪತ್ರಿಕೆಗಳನ್ನು ಗಮನಿಸುವಂತೆ ಸೂಚಿಸಲಾಗಿದೆ.
ಮೀನುಗಾರರು ಹಾಗೂ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಸೂಚನೆ
ಮುನ್ಸೂಚನೆ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದ್ದು, ಮೀನುಗಾರರು ಯಾವುದೇ ಕಾರಣಕ್ಕೂ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸಾರ್ವಜನಿಕರು, ಮಕ್ಕಳು ಹಾಗೂ ಪ್ರವಾಸಿಗರು ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಎಚ್ಚರಿಕೆ ವಹಿಸಬೇಕು. ಮಳೆ ಹಾಗೂ ಸಿಡಿಲಿನ ಸಂದರ್ಭದಲ್ಲಿ ಕೃಷಿಕರು ಕೃಷಿ ಚಟುವಟಿಕೆಗಳಿಂದ ದೂರವಿದ್ದು, ಕಾರ್ಮಿಕರು ಹೊರಗೆ ಸಂಚರಿಸದೆ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯುವಂತೆ ತಿಳಿಸಲಾಗಿದೆ. ಗ್ರಾಮೀಣ ಪ್ರದೇಶಗಳ ಕಾಲುಸಂಕ ಹಾಗೂ ಕಿರು ಸೇತುವೆಗಳನ್ನು ದಾಟುವಾಗಲೂ ಜನರು ಹೆಚ್ಚಿನ ಜಾಗರೂಕತೆ ವಹಿಸುವುದು ಅತ್ಯಗತ್ಯವಾಗಿದೆ.
ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ, ತುರ್ತು ಸಂಪರ್ಕ
ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ತುಂಡಾಗಿರುವ ತಂತಿಗಳು ಹಾಗೂ ಶಿಥಿಲಗೊಂಡಿರುವ ಹಳೆಯ ಕಟ್ಟಡಗಳ ಸಮೀಪ ಸಾರ್ವಜನಿಕರು ಸುಳಿಯಬಾರದು. ಮಳೆಯಿಂದ ಅಪಾಯಕ್ಕೆ ಒಳಗಾಗುವ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಅಥವಾ ದುರ್ಬಲ ಮನೆಗಳಲ್ಲಿರುವವರು ಮುನ್ನೆಚ್ಚರಿಕೆಯಿಂದ ಸುರಕ್ಷಿತ ಸ್ಥಳಗಳಿಗೆ ಅಥವಾ ಆಯಾ ತಹಶೀಲ್ದಾರರಿಂದ ಗುರುತಿಸಲಾದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಗೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಗೋಡೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.
ತುರ್ತು ನೆರವಿಗಾಗಿ ಸಾರ್ವಜನಿಕರು 24×7 ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ 08382-229857 ಅಥವಾ ವಾಟ್ಸಾಪ್ ಸಂಖ್ಯೆ 9483511015 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
