Spread the love

ಕಾರವಾರ: ಯಲ್ಲಾಪುರ ಪಟ್ಟಣದ ರವೀಂದ್ರನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಅಪಾಯಕಾರಿ ಬೃಹತ್ ಮರವನ್ನು ತೆರವುಗೊಳಿಸುವಂತೆ ಹತ್ತಾರು ಬಾರಿ ಮನವಿ ಸಲ್ಲಿಸಿದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಾಲೆಯ ಎಸ್‌ಡಿಎಂಸಿ (SDMC) ಅಧ್ಯಕ್ಷ ನಾಗರಾಜ್ ನಾಯ್ಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಜೀವಕ್ಕೆ ಆತಂಕ:

ಈ ಶಾಲೆಯಲ್ಲಿ ಒಟ್ಟು 52 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯ ಆವರಣ ತೀರಾ ಚಿಕ್ಕದಾಗಿದ್ದು, ಅದರೊಳಗೇ ಇರುವ ಬೃಹತ್ ಮರವು ಪ್ರಸ್ತುತ ಅಪಾಯಕಾರಿ ಸ್ಥಿತಿಯಲ್ಲಿದೆ. ತೀವ್ರ ಮಳೆ ಹಾಗೂ ಬಿರುಗಾಳಿ ಬೀಸಿದರೆ ಮರ ಉರುಳುವ ಸಾಧ್ಯತೆಯಿದ್ದು, ಮರದ ಮುಂಭಾಗದಲ್ಲೇ ವಿದ್ಯುತ್ ಲೈನ್ ಕೂಡ ಹಾದುಹೋಗಿರುವುದು ಶಿಕ್ಷಕರು ಹಾಗೂ ಪೋಷಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ: 

ಮಕ್ಕಳ ಸುರಕ್ಷತೆಗಿಂತ ಅಧಿಕಾರಿಗಳಿಗೆ ಇನ್ನೇನು ಮುಖ್ಯ? ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ರವೀಂದ್ರನಗರದ ನಿವಾಸಿ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಸೋಮೇಶ್ವರ ನಾಯ್ಕ ಅವರು ಕೂಡ ಮರ ತೆರವುಗೊಳಿಸುವಂತೆ ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.

ಶಾಲಾ ಆವರಣದಲ್ಲಿರುವ ಮರದಿಂದ ವಿದ್ಯಾರ್ಥಿಗಳಿಗೆ ಅಪಾಯ ಎದುರಾಗುವ ಸಾಧ್ಯತೆ ಇದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಿತಿರುವುದು ಏಕೆ ಎಂಬ ಪ್ರಶ್ನೆ ಸ್ಥಳೀಯರನ್ನು ಕಾಡುತ್ತಿದೆ. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡು, ಸಂಬಂಧಪಟ್ಟ ಅರಣ್ಯ ಇಲಾಖೆ ಕೂಡಲೇ ಈ ಅಪಾಯಕಾರಿ ಮರವನ್ನು ತೆರವುಗೊಳಿಸಿ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *